ಮೆಗ್ಗಾನ್‌ಗೆ ಶಾಸಕ ಚನ್ನಬಸಪ್ಪ ದಿಢೀರ್ ಭೇಟಿ…
ಶಿವಮೊಗ್ಗ : ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ಶಿವಮೊಗ್ಗ ನಗರ ಶಾಸಕ ಎಸ್. ಎನ್. ಚನ್ನಬಸಪ್ಪ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದೇ ವೇಳೆ ಬಿಪಿಎಲ್ ಕಾರ್ಡುದಾರರಿಗೆ ಉಚಿತ ಚಿಕಿತ್ಸೆ ನೀಡಬೇಕಾಗಿರುವುದು ಆಸ್ಪತ್ರೆ ಕರ್ತವ್ಯವಾಗಿದ್ದು, ಆದರೆ ಹಣ ಪಡೆಯುತ್ತಿರುವ ಸಂಗತಿ ಗಮನಕ್ಕೆ ಬಂದಿದ್ದು, ಈ ಕುರಿತು ಹಣ ಪಡೆಯುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಸಿದರು.
ಬಿಪಿಎಲ್ ಕಾರ್ಡುದಾರರಿಗೆ ಚಿಕಿತ್ಸೆ ನೀಡುವಲ್ಲಿ ಆಗುತ್ತಿರುವ ವಿಳಂಬ ಮತ್ತು ಸಮಸ್ಯೆಗಳ ಕುರಿತು ತಕ್ಷಣದ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಎಚ್ಚರಿಸಿದರಲ್ಲದೆ, ಆಸ್ಪತ್ರೆ ಕೌಂಟರ್‌ನಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ ನಿರ್ದೇಶನ ನೀಡಿದರು.
ಆಸ್ಪತ್ರೆಯ ಸ್ಕ್ಯಾನಿಂಗ್ ವಿಭಾಗ ದಲ್ಲಿ ಆಗುತ್ತಿರುವ ವಿಳಂಬದ ಕುರಿತು ನನ್ನ ಗಮನಕ್ಕೆ ಬಂದಿದ್ದು, ಈ ಸಂಬಂಧ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಕಟ್ಟು ನಿಟ್ಟಾಗಿ ಸರಿಪಡಿಸುವಂತೆ ಆದೇಶಿಸಿದರು.
ಆಸ್ಪತ್ರೆಯ ಮೆಡಿಕಲ್ ಸ್ಟೋರ್ ನಲ್ಲಿ ಹಲವಾರು ಔಷಧಿಗಳ ಅಲಭ್ಯತೆ ಬಗ್ಗೆ ಚರ್ಚಿಸಿ ರೋಗಿಗಳ ಅಹವಾಲುಗಳನ್ನು ಸ್ವೀಕರಿಸಿ, ಆಸ್ಪತ್ರೆಯ ಔಷಧಿ ಉಗ್ರಾಣವನ್ನು ಪರಿಶೀಲನೆ ನಡೆಸಿದರು. ಆಸ್ಪತ್ರೆ ಯಲ್ಲಿ ಇರುವಂತಹ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಆಸ್ಪತ್ರೆಯಲ್ಲಿನ ಸ್ವಚ್ಚತೆ ಕುರಿತು ಪರಿಶೀಲನೆ ನಡೆಸಿದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದವರ ಆರೋಗ್ಯ ವಿಚಾರಿಸಿ ಸಾರ್ವಜನಿಕ ರೊಂದಿಗೆ ಮಾತುಕತೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು.