ಜಿಲ್ಲಾ ಸುದ್ದಿತಾಜಾ ಸುದ್ದಿ

ನೀಟ್ ಅಕ್ರಮ: ರಾಷ್ಟ್ರಪತಿ ಮಧ್ಯಪ್ರವೇಶಕ್ಕೆ ಆಗ್ರಹ…

Share Below Link

ಸೊರಬ, ಜು.೨೪: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ನಿರ್ವಹಣೆಯ ವೈಫಲ್ಯ ಹಾಗೂ ಅಕ್ರಮಗಳನ್ನು ಖಂಡಿಸಿ, ವಿದ್ಯಾರ್ಥಿಗಳ ಹಿತರಕ್ಷಣೆಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿ ಹಿತರಕ್ಷಣಾ ಹೋರಾಟ ಸಮಿತಿಯ ನೇತೃತ್ವದಲ್ಲಿ ಇಂದು ತಾಲೂಕು ಕಚೇರಿಗೆ ಮೆರವಣಿಗೆ ನಡೆಸಿ, ತಹಶೀಲ್ದಾರ್ ಕೆ. ಪುರಂದರ ಅವರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.


ಈ ವೇಳೆ ಮಾತನಾಡಿದ ಸಮಿತಿಯ ಅಧ್ಯಕ್ಷ ಜೆ.ಎಸ್. ಚಿದಾನಂದ ಗೌಡ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಗಳ ಕುರಿತು ಕಾಲಮಿತಿಯೊಳಗೆ ಸ್ವತಂತ್ರ ನ್ಯಾಯಾಂಗ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಪರೀಕ್ಷಾ ಅಕ್ರಮಗಳಿಂದ ವಿದ್ಯಾರ್ಥಿಗಳ ಭವಿಷ್ಯ ಆತಂಕಕ್ಕೆ ಸಿಲುಕಿದ್ದು, ದೇಶದ ವಿವಿಧ ಭಾಗಗಳಲ್ಲಿ ಅನೇಕ ಕುಟುಂಬಗಳು ಸಂಕಷ್ಟ ಅನುಭವಿಸುತ್ತಿವೆ. ಇಂತಹ ಘಟನೆಗಳು ಮರುಕಳಿಸದಂತೆ ಸ್ವತಂತ್ರ ರಾಷ್ಟ್ರೀಯ ಪರೀಕ್ಷಾ ಮೇಲ್ವಿಚಾರಣಾ ವ್ಯವಸ್ಥೆಯನ್ನು ರೂಪಿಸಿ, ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಜರಿಗೆ ತರಬೇಕು ಎಂದರು.
ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕ ಬಸವರಾಜ ಹಶ್ವಿ ಮಾತನಾಡಿ, ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ರಾಷ್ಟ್ರಪತಿ ತುರ್ತಾಗಿ ಮಧ್ಯಸ್ಥಿಕೆ ವಹಿಸಿ ವಿದ್ಯಾರ್ಥಿಗಳ ಆತಂಕವನ್ನು ನಿವಾರಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಬೇಕು. ನೀಟ್ ಅಕ್ರಮದ ನೈತಿಕ ಹೊಣೆಯನ್ನು ಕೇಂದ್ರ ಶಿಕ್ಷಣ ಸಚಿವರು ಹೊತ್ತು, ಭವಿಷ್ಯದಲ್ಲಿ ಇಂತಹ ಲೋಪಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸಮಿತಿಯ ಜೆ.ಡಿ. ನಾಗರಾಜ ಮಾತನಾಡಿ, ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಶಿಕ್ಷಣದ ಕನಸು ಹೊತ್ತಿರುವ ವಿದ್ಯಾರ್ಥಿಗಳ ವಿಶ್ವಾಸಕ್ಕೆ ಧಕ್ಕೆ ಉಂಟಾಗದಂತೆ ಪಾರದರ್ಶಕ ಪರೀಕ್ಷಾ ವ್ಯವಸ್ಥೆ ಜರಿಯಾಗಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ವೀರೇಂದ್ರ ಗೌಡ, ಉಪಾಧ್ಯಕ್ಷ ಅನಿಲ್ ಬಾಂಬೋರೆ, ಡಿಎಸ್‌ಎಸ್ ನಗರ ಸಮಿತಿ ಸಂಚಾಲಕ ಮಂಜಪ್ಪ ಮಾವಲಿ, ಟಿ.ಎಸ್. ಕುಮಾರ, ವಕೀಲ ಶಿವಕುಮಾರ್ ಕುಳವಳ್ಳಿ, ಕೆ. ಬಂಗಾರಪ್ಪ ಸೇರಿದಂತೆ ಹಲವು ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *