ವಿದ್ಯಾರ್ಥಿಗಳ ದೈಹಿಕ ಸಾಮಾರ್ಥ್ಯ ವೃದ್ಧಿಗೆ ಕ್ರೀಡೆ ಸಹಕಾರಿ: ಸುಮತಿ
ಶಿವಮೊಗ್ಗ: ಕ್ರೀಡೆಯಿಂದ ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿ ಯಾಗುತ್ತದೆ. ಕ್ರೀಡಾಕೂಟಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದ ರಿಂದ ಏಕಾಗ್ರತೆ ಶಕ್ತಿ ಹೆಚ್ಚುವ ಜತೆಯಲ್ಲಿ ಸದಾ ಲವಲವಿಕೆಯಿಂದ ಇರಲು ಸಾಧ್ಯವಾಗುತ್ತದೆ ಎಂದು ರೋಟರಿ ಶಿವಮೊಗ್ಗ ಪೂರ್ವ ನಿಕಟಪೂರ್ವ ಅಧ್ಯಕ್ಷೆ ಸುಮತಿ ಕುಮಾರಸ್ವಾಮಿ ಹೇಳಿದರು.
ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವದ ಸಹಯೋಗ ದಲ್ಲಿ ಆಯೋಜಿಸಿದ್ದ ಹೊಳಲೂರು ವಲಯ ಮಟ್ಟದ ೧೪ ವರ್ಷ ದೊಳಗಿನ ಬಾಲಕ ಬಾಲಕಿಯರ ಕ್ರೀಡಾಕೂಟ ಸಮಾರಂಭದಲ್ಲಿ ಮಾತನಾಡಿದರು.
ಕ್ರೀಡಾಕೂಟಗಳು ಯಶಸ್ವಿ ಯಾಗಲು ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳ ಸಹಕಾರ ಮುಖ್ಯ. ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಯಶಸ್ವಿಯಾಗಲು ನಿರಂತರ ಅಭ್ಯಾಸ ಮಾಡಬೇಕು. ಕ್ರೀಡಾಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ತಿಳಿಸಿದರು.
ವಿಜೇತ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಿ ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ ಮಾತನಾಡಿ, ವಿದ್ಯಾರ್ಥಿ ಗಳು ಬಾಲ್ಯದಿಂದಲೇ ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ಗ್ರಾಮಾಂತರ ಪ್ರದೇಶದಲ್ಲಿಯೂ ಪ್ರತಿಭಾನ್ವಿತ ಕ್ರೀಡಾಪಟುಗಳಿದ್ದು, ಸೂಕ್ತ ವೇದಿಕೆಗಳನ್ನು ಕಲ್ಪಿಸುವ ಕೆಲಸ ಆಗಬೇಕು ಎಂದು ತಿಳಿಸಿದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಮಾತನಾಡಿ, ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ಸಂಕಲ್ಪವನ್ನು ವಿದ್ಯಾರ್ಥಿಗಳು ಕೈಗೊಳ್ಳಬೇಕು. ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಸಾಧಿಸಲು ನಿರಂತರ ಅಭ್ಯಾಸ ಹಾಗೂ ಆತ್ಮವಿಶ್ವಾಸ ಅತ್ಯಂತ ಮುಖ್ಯ ಎಂದು ಹೇಳಿದರು.
ಪ್ರಮುಖರಾದ ಚಂದ್ರಹಾಸ್, ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕಿಶೋರ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.